ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿ ಆರೋಪ: ಸಿಎಂ – ಡಿಸಿಎಂ ಸೇರಿ 36 ಮಂದಿಗೆ ಸಮನ್ಸ್
ಸಿಎಂ, ಡಿಸಿಎಂ ಸೇರಿ 36 ಮಂದಿ ಕಾಂಗ್ರೆಸ್ ಮುಖಂಡರ ವಿರುದ್ಧ ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿ ಆರೋಪ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ಎಲ್ಲ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ಮಾಡುವ ಮೂಲಕ ವಾಹನ ಸಂಚಾರ ಮತ್ತು ಕಾನೂನು ಸುವ್ಯವಸ್ತೆಗೆ ಅಡ್ಡಿ ಪಡಿಸಿದ್ದ ಆರೋಪದಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಮುಖಂಡರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಚಾರದ ಆರೋಪ ಎದುರಾಗಿದ್ದ ಸಂದರ್ಭದಲ್ಲಿ ಈಶ್ವರಪ್ಪ ರಾಜೀನಾಮಗೆ ಆಗ್ರಹಿಸಿ ಕಾಂಗ್ರೆಸ್ನ ಹಲವು ಮುಖಂಡರು ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮೆರವಣಿಗೆ ಮೂಲಕ ಮುಂದಾಗಿದ್ದರು. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣದ ಎಲ್ಲ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಜುಲೈ 28ಕ್ಕೆ ನಿಗದಿ ಪಡಿಸಿದೆ.
ಪ್ರಕರಣದ ಹಿನ್ನೆಲೆ: 2022ರ ಏಪ್ರಿಲ್ 4ರಂದು ಅಂದಿನ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಮುಖ್ಯಮಂತ್ರಿಗಳ ಕಚೇರಿಗೆ ಮುತ್ತಿಗೆ ಹಾಕಲು ಮೌರ್ಯ ವೃತ್ತದ ರಸ್ತೆಯಲ್ಲಿ ಕಾಂಗ್ರೆಸ್ ನಾಯಕರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನೆ ಕೈ ಬಿಡುವಂತೆ ಪೊಲೀಸರ ಹಲವು ಬಾರಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸದಿದ್ದ ಸಂದರ್ಭದಲ್ಲಿ ಎಲ್ಲ ಮುಖಂಡರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದಲ್ಲಿ ಅಂದಿನ ಪ್ರತಿಪಕ್ಷದ ನಾಯಕರಾಗಿದ್ದ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಹಮ್ಮದ್ ನಲಪಾಡ್, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ, ಸಲೀಂ ಅಹ್ಮದ್, ಶ್ರೀನಿವಾಸ್, ರಾಮಲಿಂಗಾ ರೆಡ್ಡಿ, ಉಗ್ರಪ್ಪ, ಐವಾನ್ ಡಿಸೋಜಾ, ಟಿ.ಬಿ.ಜಯಚಂದ್ರ, ಪ್ರಕಾಶ್ ರಾಥೋಡ್, ಪುಷ್ಪಾ ಅಮರನಾಥ್ ಸೇರಿ 36 ಮಂದಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಆಗಿದ್ದ ಜಹೀದಾ ಅವರು ದೂರು ದಾಖಲಿಸಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು.
ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ: ಅಂದು ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ವಾಟ್ಸಪ್ನಲ್ಲಿ ಡೆತ್ ನೋಟ್ ಕಳಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಉಡುಪಿಯ ಲಾಡ್ಜ್ನಲ್ಲಿ ಅವರು ನೇಣು ಹಾಕಿಕೊಂಡು ಸಾವನಪ್ಪಿದ್ದರು. ಸ್ಥಳಕ್ಕೆ ಉಡುಪಿ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ಸಂತೋಷ್ ಪಾಟೀಲ್ ವಿಜಯ ನಗರದಲ್ಲಿ ವಾಸವಾಗಿದ್ದರು. ಬಿಜೆಪಿ ಸದಸ್ಯರೂ ಆಗಿದ್ದ ಇವರು ಕೆ.ಎಸ್. ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಸಂತೋಷ ಅವರು ಹಿಂಡಲಗಾ ಗ್ರಾಮದಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ 108 ಕಾಮಗಾರಿ ನೆರವೇರಿಸಿದ್ದರು. ಇದರ ಬಿಲ್ ಪಡೆಯಲು ಈಶ್ವರಪ್ಪ ಶೇ.40 ಕಮಿಷನ್ ಕೇಳುತ್ತಿರುವ ಬಗ್ಗೆ ಸಂತೋಷ ಆರೋಪ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಬಗ್ಗೆ ದೂರು ಸಲ್ಲಿಸಿದ್ದರು. ಬಳಿಕ ಈಶ್ವರಪ್ಪ ಅವರು ಸಂತೋಷ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದರು.