ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಈ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.

ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈಎಸ್ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ. ಡಿಸೆಂಬರ್ 13ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಕೋವಿಡ್ ಹಗರಣ ವಿಚಾರ ಕರ್ನಾಟಕ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಇತ್ಯಾದಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸುತ್ತಿದ್ದಂತೆಯೇ, ಹಿಂದಿನ ಬಿಜೆಪಿ ಸರ್ಕಾರದ ಅವಧಿ ಹಗರಣದ ಬಗ್ಗೆ ತನಿಖೆಗೆ ಕಾಂಗ್ರೆಸ್ ಮುಂದಾಗಿತ್ತು.

ಈ ಬಳಿಕ ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಹೀಗಾಗಿ ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ತಿಳಿದು ಬಂದಿದೆ.

ಕೋವಿಡ್ ಕಾಲದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಎನ್‌-95 ಮಾಸ್ಕ್‌ ಹಾಗೂ ಪಿಪಿಇ ಕಿಟ್‌ ಸೇರಿದಂತೆ ಇತರ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರು ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಠಾಣೆಗೆ ಡಿ.13 ರಂದು ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ದೂರು ನೀಡಿದ್ದರು.

Leave a Reply

Your email address will not be published. Required fields are marked *