ನವದೆಹಲಿ : ಇರಾಕ್ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ಕೊಟ್ಟಿದೆ. ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶದ 18 ರಾಜ್ಯಗಳಲ್ಲಿ ಮಾ.15ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಮಾ.15ರವರೆಗೆ ಮಳೆ, ಭಾರೀ ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಮಾ.12 ಮತ್ತು 13ರಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಮಾ.13ರಿಂದ 15ರ ನಡುವೆ ಮಳೆಯಾಗುವ ಸಾಧ್ಯತೆ ಇದೆ.
ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರಾಗಳಲ್ಲಿ ಮಾ.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾ.13ರೊಳಗೆ ಅರುಣಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುವ ಸಂಭವವಿದೆ. ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿಯೂ ಮಾ.13ರ ಒಳಗಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಪೂರ್ವ ಕರಾವಳಿಯ ಮೀನುಗಾರರು ಪರಿಸ್ಥಿತಿ ಸ್ಥಿರವಾಗುವವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪೂರ್ವ ಕರಾವಳಿಯಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಾರ್ಚ್ 15ರ ನಂತರ ಚಂಡಮಾರುತದ ಪರಿಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.