ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾರ್ಚ್ನಲ್ಲಿ ಮಂಡಿಸಿದ್ದ ಬಜೆಟ್ಗಿಂತ ಜುಲೈಯಲ್ಲಿ ಮಂಡಿಸಲಿರುವ ಬಜೆಟ್ನಲ್ಲಿ (Karnataka Budget) 35,000 ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ (Siddaramaiah) ಸೋಮವಾರ ಹೇಳಿದ್ದಾರೆ. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಮೆಗಾ-ಬಜೆಟ್ ಅನ್ನು ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.
ಈ ಯೋಜನೆಗಳನ್ನು ಜಾರಿಗೆ ತರಲು ನಮಗೆ ಕನಿಷ್ಠ 60,000 ಕೋಟಿ ರೂಪಾಯಿ ಬೇಕಾಗಬಹುದು. ನಾನು ಜುಲೈ 7 ರಂದು ಮಂಡಿಸಲಿರುವ ಬಜೆಟ್ನಲ್ಲಿ ಕಳೆದ ಬಾರಿಯ ಬಜೆಟ್ಗಿಂತ 35,000 ಕೋಟಿ ರೂಪಾಯಿ ಹೆಚ್ಚಳವಾಗಬಹುದು. ನಾವು ಎಲ್ಲಾ ಗ್ಯಾರಂಟಿಗಳನ್ನು ಕಾರ್ಯಗತಗೊಳಿಸುತ್ತೇವೆ ಎಂದು ಅವರು ಹೇಳಿರುವುದಾಗಿ ವರದಿ ಮಾಡಿದೆ.
ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿಗಳ ಪೈಕಿ, ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ.
ಮೊದಲ ಬಜೆಟ್ ನೆನಪಿಸಿಕೊಂಡ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ತಮ್ಮ ಮೊದಲ ಬಜೆಟ್ ಮಂಡನೆಗೆ ಹೇಗೆ ಸಿದ್ಧತೆ ಮಾಡಿಕೊಂಡಿದ್ದೆ ಎಂಬುದನ್ನು ಸ್ಮರಿಸಿದ್ದಾರೆ. ಅದೇ ರೀತಿ ರಾಜ್ಯ ಬಜೆಟ್ನ ಇತಿಹಾಸದ ಬಗ್ಗೆಯೂ ಮಾತನಾಡಿದ್ದಾರೆ. ಕೆಂಗಲ್ ಹನುಮಂತಯ್ಯ ಅವರು ಮೈಸೂರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 1950 ರ ದಶಕದಲ್ಲಿ 21.3 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿದ್ದರು ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.