ಬೆಂಗಳೂರು: ರಾಜ್ಯಾದ್ಯಂತ 2,500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ರಾಜ್ಯ ಕಾಂಗ್ರೆಸ್ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಿದ ಒಂದು ದಿನದ ನಂತರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (ಹೆಚ್ಡಿಕೆ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಪಂ, ತಾ.ಪಂ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ನಿನ್ನೆ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದರಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯವಿಲ್ಲ. ಸ್ಥಳೀಯ ಸಂಸ್ಥೆಗಳು ಪ್ರಜಾಪ್ರಭುತ್ವದ ಅಡಿಪಾಯವಾಗಿರುವುದರಿಂದ ಈ ಸಂಸ್ಥೆಗಳಿಗೆ ತಕ್ಷಣವೇ ಚುನಾವಣೆ ನಡೆಸಬೇಕು, ಮಾನವ ಸರಪಳಿ ರಚನೆಯಿಂದ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದರು.
ಕಳೆದ 16 ತಿಂಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿಲ್ಲ ಎಂದಿರುವ ಕುಮಾರಸ್ವಾಮಿ, ಜಿಪಂ, ತಾ.ಪಂ. ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಹಲವು ವರ್ಷಗಳಿಂದ ಚುನಾವಣೆ ನಡೆಯದ ಕಾರಣ ಕೂಡಲೇ ಚುನಾವಣೆ ನಡೆಸಬೇಕು ಎಂದು ಹೇಳಿದರು. .