ಚಂಡೀಗಢ : ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಬೇಕು ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಇಂದು ಆಗ್ರಹಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫ.13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಪಂಜಾಬ್‌ನ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನ.26 ರಿಂದ ಖಾನೌರಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
“ಮೋದಿ ಜಿಯಿಂದ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ ದೆಹಲಿಯಿಂದ 200 ಕಿಲೋಮೀಟರ್ ದೂರದಲ್ಲಿ ಕುಳಿತಿರುವ ರೈತರೊಂದಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲವೇ? ನೀವು ಯಾವ ಸಮಯಕ್ಕಾಗಿ ಕಾಯುತ್ತಿದ್ದೀರಿ?” ಎಂದು ಪ್ರಶ್ನಿಸುವ ಮೂಲಕ ಎಕ್ಸ್‌ನಲ್ಲಿ ಭಗವಂತ್ ಮಾನ್ ಪೋಸ್ಟ್ ಮಾಡಿದ್ದಾರೆ. ಇದು ಕೇಂದ್ರ ಸರ್ಕಾರದ ಕರ್ತವ್ಯವಾಗಿದ್ದು, ಯಾವುದೇ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *