ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ ಸೇರಿದಂತೆ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಸಚಿವರು ಮೌನ ತಾಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದು ಕುಳಿತಿರುವ ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿ ನಡೆ ಮಾತ್ರ ಇನ್ನೂ ನಿಗೂಢವಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಆಗ್ರಹಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಖರ್ಗೆ ಸೂಚನೆ ನೀಡಿರುವುದರಿಂದ ಇನ್ನು ಮುಂದೆ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಪರವಾಗಿರುವ ಶಾಸಕರು ಗುಂಪು, ಬೆಂಬಲಿಗರು ಇದೀಗ ದುಬೈ ಪ್ರವಾಸಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದು, ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.