ಬೆಂಗಳೂರು : ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೆಟ್ರೋ ಟಿಕೆಟ್ ದರ ಇಳಿಕೆ ಮಾಡುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಸಿಎಂ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು, ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದರು.
ದರ ಏರಿಕೆಯನ್ನು ಮರುಪರಿಶೀಲನೆ ಬಗ್ಗೆ ಯಾವುದೇ ಸಲಹೆ ಸೂಚನೆಗಳನ್ನು ನೀಡಿಲ್ಲ. ಹೀಗಾಗಿ ಯಾವೆಲ್ಲಾ ಸ್ಟೇಜ್ಗಳ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎನ್ನುವುದನ್ನು ಮಾತ್ರ ಬಿಎಂಆರ್‌ಸಿಎಲ್ ಪರಿಶೀಲನೆ ಮಾಡಲಿದೆ. ಆದ್ರೆ, ಈಗ ಏರಿಕೆಯಾಗಿರುವ ದರವನ್ನು ಇಳಿಕೆ ಮಾಡುವುದು ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗಿದೆ.
ಒಟ್ಟಿನಲ್ಲಿ ನಮ್ಮ ಮೆಟ್ರೋ ಹೇಳಿದ್ದು ಒಂದು ಮಾಡಿದ್ದು ಮತ್ತೊಂದು ಎನ್ನುವ ರೀತಿಯಲ್ಲಿ ಸಿಕ್ಕಿದ್ದೆ ಚಾನ್ಸ್ ಎಂದು ಒನ್ ಟು ಡಬಲ್ ದರ ಏರಿಕೆ ಮಾಡಿರುವುದಕ್ಕೆ ಪ್ರಯಾಣಿಕರು ತೀವ್ರವಾಗಿ ಖಂಡಿಸುತ್ತಿದ್ದಾರೆ. ಹೀಗಾಗಿ ಬಿಎಂಆರ್‌ಸಿಎಲ್ ದರ ಏನಾದರೂ ಕಡಿಮೆ ಮಾಡಲು ಮುಂದಾಗಲಿದ್ಯಾ ಎಂದು ಕಾದು ನೋಡಬೇಕಿದೆ.