ಬೆಂಗಳೂರು : ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್‌ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್‌ ಮಾಡಲಾಗಿದೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.

ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯನಿರ್ವಹಿಸಿ. ನಿಯಮ ಪಾಲಿಸದ ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅತ್ಯಗತ್ಯವಿದೆ. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ನಕಲಿ ದಾಖಲೆಗಳ ಪರಿಶೀಲಿಸದೆ ಆಸ್ತಿ ನೋಂದಣಿ ಮಾಡಲಾಗುತ್ತಿದೆ. ಕೆಲವು ಅಧಿಕಾರಿಗಳೂ ಇದರ ಪರವಾಗಿದ್ದಾರೆ. ಇದೆಲ್ಲಕ್ಕೂ ಕಡಿವಾಣ ಅಗತ್ಯ. ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತಿ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ‌ ಎಂದರು.

ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದಕ್ಕೆ ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್‌ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್‌ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದರು.

ಈ ವರ್ಷ ಡಿಸೆಂಬರ್‌ ಕೊನೆಗೆ 16,993 ಕೋಟಿ ರೂ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.

ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ವಹಿಸಲು ಸೂಚಿಸಿದರು.

Leave a Reply

Your email address will not be published. Required fields are marked *