ಹುಬ್ಬಳ್ಳಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಾಗಿದ್ದ, ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಶಂಕರ್ ಚವ್ಹಾಣ್ (29) ಮೃತ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಅವರು ಇದೇ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಕಳೆದ ಏಳು ದಿನಗಳಿಂದ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಐವರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮೃತ ದುರ್ದೈವಿಗಳಾಗಿದ್ದು, ಇನ್ನುಳಿದ ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದೆ.