ಬೆಂಗಳೂರು : ಬೆಂಗಳೂರಿನ ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಇಂದು (ಜ.13) ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಸ್ಫೋಟದಿಂದ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಬಾಗಿಲು, ಕಿಟಕಿ ಚೂರಾಗಿದ್ದು, ಕಿಟಕಿಗೆ ಹಾಕಿದ್ದ ಬಟ್ಟೆ ಸುಟ್ಟು ಕರಕಲಾಗಿದೆ. ಜೊತೆಗೆ ಅಕ್ಕಪಕ್ಕದ ಮನೆಗಳಿಗೂ ಹಾನಿಯುಂಟು ಮಾಡಿದೆ.
ಒಂದು ಮಗು ಹಾಗೂ ಎದುರು ಮನೆಯಲ್ಲಿದ್ದ 25 ವರ್ಷದ ವ್ಯಕ್ತಿ ಸೇರಿ ಇಬ್ಬರು ಪುರುಷರು ಗಾಯಗೊಂಡಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದು, ಸ್ಥಳೀಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.