ಬೆಂಗಳೂರು : ಫೆ. 25 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಲಿದ್ದು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ತಿಳಿದು ಬಂದಿದೆ.
ದೆಹಲಿಗೆ ಭೇಟಿ ನೀಡಲಿರುವ ಡಿಕೆ.ಶಿವಕುಮಾರ್ ಅವರು, ಭೇಟಿ ವೇಳೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ನಿರ್ಮಾಣವಾಗಲಿರುವ ಹೊಸ ಕಾಂಗ್ರೆಸ್ ಭವನದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ. ಇದಲ್ಲದೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗತ್ತಿದೆ.
ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನೂ ಭೇಟಿ ಮಾಡಲಿರುವ ಅವರು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.