ಪ್ರಯಾಗ್‌ರಾಜ್ : 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ – 2025 ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ.
ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು ಬೆಳಗ್ಗಿನ ಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.
ಫೆ.26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ. ಮಹಾಕುಂಭ ಮೇಳದಲ್ಲಿ ಆರು ಶಾಹಿ ಸ್ನಾನ ನಡೆಯಲಿದೆ. ಪುಣ್ಯಸ್ನಾನಕ್ಕೆ ಸರ್ಕಾರದಿಂದ ಸಕಲ ವ್ಯವಸ್ಥೆಯಾಗಿದೆ. ಅವಘಡಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಿದೆ.
ನದಿಯ ಉದ್ದಕ್ಕೂ 12 ಕಿಲೋ ಮೀಟರ್ ಘಾಟ್‌ಗಳ ನಿರ್ಮಾಣ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಎನ್‌ಡಿಆರ್‌ಎಫ್ ಪಡೆಯಿಂದ ನೀರನ ಮೇಲೆ ಅಂಬುಲೆನ್ಸ್ ನಿರ್ಮಾಣ ಮಾಡಲಾಗಿದೆ. ಐಸಿಯು ಸೌಲಭ್ಯ ಹೊಂದಿರುವ ಅಂಬುಲೆನ್ಸ್‌ಗಳನ್ನು ನದಿ ನೀರಿನ ಮೇಲೆ ನಿಲ್ಲಿಸಲಾಗಿದೆ.
ಅಂಬುಲೆನ್ಸ್‌ಗಳಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಹಾಸಿಗೆಗಳ ಜೊತೆಗೆ ಆಮ್ಲಜನಕ ಮತ್ತು ವೆಂಟಿಲೇಟರ್‌ಗಳ ಸೌಲಭ್ಯ ಕಲ್ಪಿಸಲಾಗಿದೆ. ನದಿಯಲ್ಲಿ ಸ್ನಾನ ಮಾಡುವವರ ಸುರಕ್ಷತೆಗಾಗಿ 800 ಪ್ರಾದೇಶಿಕ ಸಶಸ್ತ್ರ ಕಾನ್ಸ್‌ಟೇಬಲ್, 150 ಎಸ್‌ಡಿಆರ್‌ಎಫ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.