ಆರೋಗ್ಯ ವಿಮೆ ಮೇಲೆ ಶೇ 18 ರಷ್ಟು ಜಿಎಸ್.ಟಿ ತೆರಿಗೆ ವಿರುದ್ಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿಯೇತರ ಸರ್ಕಾರಗಳಿಗೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿದ್ದಾರೆ.
ತಮಿಳುನಾಡು, ಕೇರಳ, ಆಂದ್ರಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ 7 ರಾಜ್ಯಗಳ ಆರೋಗ್ಯ ಸಚಿವರಿಗೆ ಪತ್ರ ಬರೆದಿರುವ ದಿನೇಶ್ ಗುಂಡೂರಾವ್, ಸೆಪ್ಟೆಂಬರ್ 9 ರಂದು ನಡೆಯಲಿರುವ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಧ್ವನಿ ಎತ್ತುವಂತೆ ಒತ್ತಾಯಿಸಿದ್ದಾರೆ. ಆರೋಗ್ಯ ವಿಮೆಗಳ ಮೇಲೆ ಶೇ 18 ರಷ್ಟು ಜಿಎಸ್ ಟಿ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಜನರಿಗೆ ಹೊರೆಯಾಗುತ್ತಿದೆ.
ಹೆಲ್ತ್ ಇನ್ಸೂರೆನ್ಸ್ ರಕ್ಷಣೆಯಿಂದ ಜನರು ದೂರವಾಗುತ್ತಿದ್ದಾರೆ. ಪರಿಣಾಮ ವೈದ್ಯಕೀಯ ತುರ್ತು ಪರಿಸ್ಥಿತಿಗಳಲ್ಲಿ ಕುಟುಂಬ ವರ್ಗದವರು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಆರೋಗ್ಯ ವಿಮೆಯ ರಕ್ಷಣೆಯನ್ನ ಪಡೆಯುವ ನಿಟ್ಟಿನಲ್ಲಿ ಜನರಿಗೆ ಪ್ರೋತ್ಸಾಹ ನೀಡುವಂಥಹ ತೆರಿಗೆ ನೀತಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಧಾನಿ ಮೋದಿಯವರಿಗೆ ಪತ್ರ ಬರೆಯಲಾಗಿದ್ದು, ಬಿಜೆಪಿಯೇತರ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಬೇಕು ಎಂದು ಸಚಿವರು ಪತ್ರದಲ್ಲಿ ಮನವಿ ಮಾಡಿದ್ದಾರೆ..