ದೆಹಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ತಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದೆಹಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನುವ ಎಚ್ಚರಿಕೆಗಳು ದೊರೆತಿವೆ.
ಖಲಿಸ್ತಾನಿ ಭಯೋತ್ಪಾದಕರು ದೆಹಲಿಯ ವಾತಾವರಣವನ್ನು ಹಾಳು ಮಾಡಲು ನಾಯಕರ ಮೇಲೆ ದಾಳಿ ಮಾಡಬಹುದು ಎಂದು ಗುಪ್ತಚರ ಸಂಸ್ಥೆಗಳು ದೆಹಲಿ ಪೊಲೀಸರೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಅರವಿಂದ್ ಕೇಜ್ರಿವಾಲ್ ಅವರಿಗೆ ಝಡ್ ಕೆಟಗರಿ ಭದ್ರತೆ ಸಿಕ್ಕಿದೆ.
ಇದರಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ನಾಯಕರು ಸೇರಿದ್ದಾರೆ. ರ್ಯಾಲಿ ಅಥವಾ ಸಾರ್ವಜನಿಕ ಸಭೆಗಳಲ್ಲಿ ನಾಯಕರ ಭದ್ರತೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಎಚ್ಚರಿಕೆಯಂತೆ ಕಾಲಕಾಲಕ್ಕೆ ಭದ್ರತಾ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 5 ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, 56 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದುವರೆಗೆ 85 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜನವರಿ 13 ರಂದು 20 ನಾಮಪತ್ರಗಳು ಮತ್ತು ಜನವರಿ 10 ರಂದು 9 ನಾಮಪತ್ರಗಳು ಸಲ್ಲಿಕೆಯಾಗಿವೆ. ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಫೆಬ್ರವರಿ 8 ರಂದು ಬರಲಿದೆ. ಈ ಹಿಂದೆಯೂ ಅರವಿಂದ್ ಕೇಜ್ರಿವಾಲ್ ಮೇಲೆ ಹಲವು ದಾಳಿಗಳು ನಡೆದಿವೆ ಎಂದು ತಿಳಿದು ಬಂದಿದೆ.