ಬೆಂಗಳೂರು : ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸ್ನೇಹಮಯಿ ಕೃಷ್ಣ ಅವರು ಬಯಲಿಗೆಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಇದರ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದೇವೆ ಎಂದು ವಿವರಿಸಿದರು.

ಮುಡಾ ಹಗರಣವು ನಿನ್ನೆ ಮಹತ್ವದ ತಿರುವು ಪಡೆದುಕೊಂಡಿದ್ದು, ಜಾರಿ ನಿರ್ದೇಶನಾಲಯವು (ಇಡಿ) 300 ಕೋಟಿ ರೂ.ಗೂ ಬೆಲೆಬಾಳುವ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ.

ಈ ಹಗರಣದಿಂದ ಮುಡಾಕ್ಕೆ ಕೋಟಿಗಟ್ಟಲೆ ನಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು ಸ್ಪಷ್ಟವಾಗಿದೆ. ಇದರಿಂದ ಸರ್ಕಾರ ಮತ್ತು ಮುಡಾಕ್ಕೆ ಸಾವಿರಾರು ಕೋಟಿ ನಷ್ಟವಾದುದು ಮತ್ತೊಮ್ಮೆ ಋಜುವಾತಾಗಿದೆ ಎಂದು ವಿಶ್ಲೇಷಿಸಿದರು.

ಈ ಪ್ರಕರಣವನ್ನು ಬಯಲಿಗೆ ಎಳೆದ ಸ್ನೇಹಮಯಿ ಕೃಷ್ಣ ಅವರನ್ನು ಅಭಿನಂದಿಸಿ, ಸ್ನೇಹಮಯಿ ಕೃಷ್ಣ ಅವರ ಧ್ವನಿ ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತ್ತು. ಅವರ ಮೇಲೆ ಆರೋಪ ಹೊರಿಸಿ ಅವರನ್ನು ಬಂಧಿಸುವ ಹಂತಕ್ಕೂ ರಾಜ್ಯ ಸರ್ಕಾರ ಹೋಗಿತ್ತು. ಇ.ಡಿ ಕೈಗೊಂಡ ಕ್ರಮಗಳಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *