ಬೆಂಗಳೂರು : ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 5 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಬಜೆಟ್ ಬಳಿಕ ಮುಖ್ಯಮಂತ್ರಿಗಳು ಹಾಲಿನ ಬೆಲೆ ಹೆಚ್ಚಳಕ್ಕೆ ಸಮ್ಮತಿಸುವ ಸಾಧ್ಯತೆಯಿದೆ.
ಕೆಎಂಎಫ್ ಹಾಗೂ ಅದರ ಸದಸ್ಯ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಿಸುವಂತೆ ಹಲವು ತಿಂಗಳಿಂದ ಸರಕಾರಕ್ಕೆ ಒತ್ತಾಯಿಸುತ್ತಿವೆ. ಮತ್ತೊಂದೆಡೆ ರೈತರು ಬೆಂಗಳೂರಿನ ಕೆಎಂಎಫ್ ಕೇಂದ್ರ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ಮಾಡಿ ಹಾಲಿನ ದರ ಹೆಚ್ಚಿಸುವಂತೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಕೆಎಂಎಫ್ ಹಾಗೂ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳ ಪ್ರತಿನಿಧಿಗಳು ಸಭೆ ನಡೆಸಿ ಹಾಲಿನ ದರ ಹೆಚ್ಚಿಸುವಂತೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲು ನಿರ್ಧರಿಸಿದ್ದರು.
ಈ ನಿರ್ಧಾರದಂತೆ ಹಾಲಿನ ದರವನ್ನು ಲೀಟರ್‌ಗೆ 5 ರೂ. ಹೆಚ್ಚಳ ಮಾಡುವಂತೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹೈನುಗಾರಿಕೆಯ ಖರ್ಚು ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಹಾಲಿನ ದರ ಹೆಚ್ಚಿಸದಿದ್ದರೆ ಜಿಲ್ಲಾ ಹಾಲು ಒಕ್ಕೂಟಗಳು ನಷ್ಟ ಅನುಭವಿಸಬೇಕಾಗುತ್ತದೆ. ಮತ್ತೊಂದೆಡೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಇತರೆ ಬ್ರ್ಯಾಂಡ್‌ಗಳ ಹಾಲಿನ ದರಕ್ಕೆ ಹೋಲಿಸಿದರೆ ರಾಜ್ಯದ ನಂದಿನಿ ಹಾಲಿನ ಬೆಲೆ ತುಂಬಾ ಕಡಿಮೆಯಿದೆ ಎಂದು ಪ್ರಸ್ತಾವದಲ್ಲಿ ಉಲ್ಲೇಸಲಾಗಿದೆ.