ಬೆಂಗಳೂರು : ಅನುಮತಿ ಪಡೆಯದೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಾಜ್ಯ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮತ್ತು ಪಕ್ಷದ ಇತರ 11 ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಕಳೆದ ವಾರ ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಮಾನಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮುಖಂಡರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿ, ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಪ್ರತಿಭಟನೆಯನ್ನು ಆಯೋಜಿಸಲು ಯಾವುದೇ ಅನುಮತಿಯನ್ನು ಕೇಳಲಾಗಿಲ್ಲ ಮತ್ತು ಡಿಸೆಂಬರ್ 31ರಂದು ಬಿಜೆಪಿ ಪಕ್ಷದ ಸದಸ್ಯರ ವಿರುದ್ಧ ಕಾನೂನುಬಾಹಿರ ಸಭೆಗಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪೊಲೀಸ್ ಸಬ್-ಇನ್‌ಸ್ಪೆಕ್ಟರ್‌ರ ದೂರಿನ ಆಧಾರದ ಮೇಲೆ, ಸಾರ್ವಜನಿಕ ಪ್ರದೇಶ ವಿರೂಪಗೊಳಿಸುವಿಕೆ ಕಾಯ್ದೆ ಸಂಬಂಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.