ಬೆಂಗಳೂರು : ಆರೋಗ್ಯ ಸಚಿವರ ಸಂಧಾನ ವಿಫಲವಾಗಿದ್ದು ಕೊರೆಯುವ ಚಳಿಯಲ್ಲೂ ಪುಟ್ಟ ಮಕ್ಕಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ, ಸಚಿವ ದಿನೇಶ್ ಗುಂಡೂರಾವ್ ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು. ಆದರೆ ಸಚಿವರ ಭರವಸೆ ಒಪ್ಪದ ಕಾರ್ಯಕರ್ತರು ಕನಿಷ್ಠ 15 ಸಾವಿರ ರೂ. ಗೌರವಧನ ನೀಡುವಂತೆ ಪಟ್ಟು ಹಿಡಿದಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹೀಗಿದೆ:

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು 15,000 ಮಾಸಿಕ ಗೌರವಧನ ನೀಡಬೇಕು.
  2. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ರೂಪಾಯಿ ಗೌರವಧನವನ್ನು ಹೆಚ್ಚಿಸಬೇಕು.
  3. ಆಶಾ ಕಾರ್ಯಕರ್ತೆಯರು ಸ್ಮಾರ್ಟ್ ಫೋನ್ ಬಳಕೆ ಬಗ್ಗೆ ಹೊರಡಿಸಿದ ಅಧಿಕೃತ ಜ್ಞಾಪನಾ ಪತ್ರ ಕೂಡಲೇ ಹಿಂತೆಗೆದುಕೊಳ್ಳಬೇಕು.
  4. ಅಧಿಕೃತವಾಗಿ ಆಶಾಗಳದಲ್ಲದ ಕೆಲಸವನ್ನು ಮಾಡಲು ಹೇಳಿರುವ ಆದೇಶ ವಾಪಸ್‌ ಪಡೆಯಬೇಕು.
  5. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್ ಡಾಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಿ, ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.
  6. ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ 5 ಲಕ್ಷ ರೂ.ಗೆ ಹೆಚ್ಚಿಸುವುದು.
  7. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು.
  8. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಆನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.
  9. ಎಲ್ಲ ಆಶಾ ಕಾರ್ಯಕರ್ತೆಯರ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತ್ರೀವ್ರ ಕಾಯಿ ಇದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು.
  10. ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್ ಐ ಸೌಲಭ್ಯ ಒದಗಿಸಬೇಕು.

Leave a Reply

Your email address will not be published. Required fields are marked *